*##ಮಾಹಿತಿ ವೇದಿಕೆ##*
*ಒನ್ ಟೈಮ್ ಪಾಸ್‍ವರ್ಡ್ (OTP) ಬಗ್ಗೆ ತಿಳಿದುಕೊಂಡಿರಲೇಬೇಕಾದ ಸಂಗತಿಗಳು*
=============
*ಒನ್ ಟೈಮ್ ಪಾಸ್‍ವರ್ಡ್; ವಿಶ್ವ ವ್ಯಾಪಿ ಜಾಲದ ಮೂಲಕ ನಡೆಯುವ ವ್ಯವಹಾರಗಳಲ್ಲಿ ಬಳಕೆದಾರರ ಗುರುತನ್ನು ಖಾತರಿಪಡಿಸಿಕೊಳ್ಳಲು ಬಳಕೆಯಾಗುವ ಹೆಚ್ಚುವರಿ ಪಾಸ್‍ವರ್ಡ್. ಇದನ್ನು ಒಮ್ಮೆ ಮಾತ್ರ ಬಳಸುವುದು ಸಾಧ್ಯ. ಕಾರ್ಡುಗಳನ್ನು , ನೆಟ್‍ಬ್ಯಾಂಕಿಂಗ್ ಸೌಲಭ್ಯವನ್ನು ಬಳಸಿ ಹಣಪಾವತಿಸುವುದು ನಮ್ಮಲ್ಲಿ ಅನೇಕರಿಗೆ ಚೆನ್ನಾಗಿಯೇ ಅಭ್ಯಾಸವಾಗಿದೆ. ಹೀಗೆ ಪಾವತಿಸುವಾಗ ಹಣ ತೆಗೆಯಬೇಕಾದ್ದು ಯಾವ ಖಾತೆಯಿಂದ ಎಂದು ಬ್ಯಾಂಕಿಗೆ ಗೊತ್ತಾಗಬೇಕಲ್ಲ, ನಾವು ಖಾತೆಯ ವಿವರಗಳನ್ನು (ಲಾಗಿನ್, ಅಕೌಂಟ್ ಸಂಖ್ಯೆ ಇತ್ಯಾದಿ) ದಾಖಲಿಸುವುದು ಇದಕ್ಕಾಗಿಯೇ. ಅದನ್ನು ದಾಖಲಿಸುತ್ತಿರುವವರು ನಾವೇ ಎಂದೂ ಗೊತ್ತಾಗಬೇಡವೇ, ಅದಕ್ಕಾಗಿ ಪಾಸ್‍ವರ್ಡನ್ನೂ ಎಂಟರ್ ಮಾಡುತ್ತೇವೆ.*
=============
*ಆದರೆ, ನಮ್ಮ ಪಾಸ್‍ವರ್ಡ್ ನಮಗೆ ಮಾತ್ರ ಗೊತ್ತು ಎಂದು ಏನು ಗ್ಯಾರಂಟಿ? ಅದನ್ನು ಬೇರೆ ಯಾರೋ ಕದ್ದು ತಿಳಿದುಕೊಂಡುಬಿಟ್ಟಿರಬಹುದಲ್ಲ ! ಇಂತಹ ಸನ್ನಿವೇಶಗಳನ್ನು ಕೊಂಚಮಟ್ಟಿಗಾದರೂ ತಪ್ಪಿಸುವ ಉದ್ದೇಶದಿಂದ ಬಳಕೆಯಾಗುವ ತಂತ್ರಗಳಲ್ಲೊಂದು ಓಟಿಪಿ. ಓಟಿಪಿ ಎನ್ನುವುದು `ಒನ್ ಟೈಮ್ ಪಾಸ್‍ವರ್ಡ್’ ಎಂಬ ಹೆಸರಿನ ಹ್ರಸ್ವರೂಪ. ಈ ವಿಧಾನ ಬಳಸುವಾಗ ಖಾತೆಯ ವಿವರ-ಪಾಸ್‍ವರ್ಡುಗಳ ಜತೆಗೆ ಬಳಕೆದಾರರ ಮೊಬೈಲಿಗೆ ಅಥವಾ ಇಮೇಲ್ ವಿಳಾಸಕ್ಕೆ ಕಳುಹಿಸಿದ ಇನ್ನೊಂದು ಪಾಸ್‍ವರ್ಡನ್ನೂ ದಾಖಲಿಸುವಂತೆ ಕೇಳಲಾಗುತ್ತದೆ. ಕೆಲವೆಡೆ ಮೊಬೈಲಿಗೆ ಬರುವ ಈ ಸಂದೇಶವನ್ನು ಸಾಮಾನ್ಯ ಪಾಸ್‍ವರ್ಡ್ ಬದಲಿಗೆ ಉಪಯೋಗಿಸುವ ಸೌಲಭ್ಯವೂ ಇರುತ್ತದೆ.*
==============
*ಈ ಪಾಸ್‍ವರ್ಡನ್ನು ಒಮ್ಮೆ ಮಾತ್ರವೇ-ಅದೂ ನಿಗದಿತ ಅವಧಿಯೊಳಗೆ ಮಾತ್ರ- ಉಪಯೋಗಿಸುವುದು ಸಾಧ್ಯ. ಎಸ್ಸೆಮ್ಮೆಸ್‍ನಂತಹ ಸರಳ ಮಾಧ್ಯಮವನ್ನು ಬಳಸಿ ಆನ್‍ಲೈನ್ ವ್ಯವಹಾರಗಳಿಗೆ ಹೆಚ್ಚಿನ ಸುರಕ್ಷತೆ ತಂದುಕೊಡುತ್ತಿರುವುದು ಓಟಿಪಿಯ ಹೆಚ್ಚುಗಾರಿಕೆ. ಕಾರ್ಡು, ಪಾಸ್‍ವರ್ಡುಗಳ ಜತೆಗೆ ಮೊಬೈಲ್ ಫೋನ್ ಕೂಡ ಕಳ್ಳರ ಪಾಲಾದ ಸಂದರ್ಭಗಳನ್ನು ಹೊರತುಪಡಿದಂತೆ ಇದರ ವಿಶ್ವಾಸಾರ್ಹತೆ ಸಾಕಷ್ಟು ಉತ್ತಮವಾಗಿಯೇ ಇರುತ್ತದೆ. ಓಟಿಪಿಯ ಉದ್ದೇಶ ನಮ್ಮ ಸುರಕ್ಷತೆಯೇ ಆದ್ದರಿಂದ ನಾವು ಅದನ್ನು ಇತರರಿಗೆ ತಿಳಿಸುವುದು ಖಂಡಿತಾ ಒಳ್ಳೆಯದಲ್ಲ.*
============
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ